ಕೊಪ್ಪಳ ಮೇ 09 (ಕರ್ನಾಟಕ ವಾರ್ತೆ): ಮೇ 10ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಮೇ 9ರಂದು ಕೊಪ್ಪಳ ಕೇಂದ್ರ ಸ್ಥಾನ ಸೇರಿದಂತೆ ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ ಮತ್ತು ಯಲಬುರ್ಗಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಹ ಸಂಚರಿಸಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ವಿಧಾನಸಭಾ ಚುನಾವಣೆಯು ಮುಕ್ತ ಹಾಗೂ ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಲ್ಲಿನ ಮತಗಟ್ಟೆಗಳಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೂಕ್ತವಾದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಜಿಲ್ಲೆಯ ಜನರು ಶಾಂತಿಯುತ ಮತದಾನಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಆದಾಗ್ಯೂ ಯಾರಾದರು ಅನವಶ್ಯಕವಾಗಿ ಜನರಲ್ಲಿ ಭಯ ಹುಟ್ಟಿಸಿ ಮತದಾನದ ವೇಳೆ ಶಾಂತಿ ಕದಡಲು ಪ್ರಯತ್ನಿಸಿದರೆ ಅಂತವರ ಮೇಲೆ ಯಾವುದೇ ಮುಲಾಜಿಲ್ಲದೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಅವರು ಎಚ್ಚರಿಕೆ ನೀಡಿದ್ದಾರೆ.