ನವದೆಹಲಿ : ಕರ್ನಾಟಕದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಬಹುತೇಕ ಫಿಕ್ಸ್ ಆಗಿದ್ದು, ಕಾಂಗ್ರೆಸ್ ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗಿದೆ.
ಇಂದು ರಾಹುಲ್ ಗಾಂಧಿ ಭೇಟಿ ಬಳಿಕ ‘ಸಿದ್ದರಾಮಯ್ಯ ಸಿಎಂ’ ಎಂದು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಲಿ ಎಂದು ಈ ಹಿಂದೆ ರಾಹುಲ್ ಗಾಂಧಿ ಒಲವು ವ್ಯಕ್ತಪಡಿಸಿದ್ದರು. ಇಂದು ಹೈ ವೋಲ್ಟೇಜ್ ಸಭೆ ನಡೆಯಲಿದ್ದು, ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪೈಪೋಟಿ ಮುಂದುವರೆದಿದ್ದು, ಈ ನಡುವೆ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಬರುವಂತೆ ಸಿದ್ದರಾಮಯ್ಯಗೆ ಸೂಚನೆ ನೀಡಲಾಗಿದೆ.ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದರು. ಸಿದ್ದರಾಮಯ್ಯ ಮನವಿ ಮೇರೆಗೆ ಸೋನಿಯಾ ಗಾಂಧಿ ನಿವಾಸಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ನವದೆಹಲಿಯ ಜನಪತ್ ನಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಲಿರುವ ಸಿದ್ದರಾಮಯ್ಯ, ಮಧ್ಯಾಹ್ನ 12 ಗಂಟೆಗೆ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಚೆರ್ಚೆ ಬಳಿಕ ಸಿಎಂ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ.
ಇನ್ನು ಮುಖ್ಯಮಂತ್ರಿ ರೇಸ್ ನಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧರಿಸಿದ್ದು, ಡಿಸಿಎಂ ಹುದ್ದೆ ಜೊತೆಗೆ ಇಂಧನ ಇಲಾಖೆಯನ್ನೂ, ಕೆಪಿಸಿಸಿ ಅಧ್ಯಕ್ಷದಲ್ಲಿ ಮುಂದುವರೆಯುವಂತೆ ಹೈಕಮಾಂಡ್ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.